ಬೆಂಗಳೂರು,ಜ.27- ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ಗೆ ಪಕ್ಷದ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಕೋರ್ ಕಮಿಟಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಈ ಹಿಂದೆ ಕೋರ್ ಕಮಿಟಿಯಲ್ಲಿ ಮಾಜಿ ಸಚಿವ ಲಕ್ಷ್ಮಣ್ ಸವದಿಗೆ ಸ್ಥಾನವನ್ನು ನೀಡಲಾಗಿತ್ತು.
ಅವರು ಕೂಡ ಬಿಜೆಪಿಯನ್ನು ತೊರೆದಿದ್ದರಿಂದ ಯಾರಿಗು ಕೂಡ ಈ ಸ್ಥಾನವನ್ನು ನೀಡಿರಲಿಲ್ಲ.
ಮೂರು ದಿನಗಳ ಹಿಂದೆ ಕಾಂಗ್ರೆಸ್‍ಗೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದ ಜಗದೀಶ್ ಶೆಟ್ಟರ್ ಅವರಿಗೆ ಈಗ ಕೋರ್ ಕಮಿಟಿಯಲ್ಲಿ ಸ್ಥಾನವನ್ನು ನೀಡಲಾಗಿದೆ. ಈ ಹಿಂದೆಯೂ ಕೂಡ ಅವರು ಕೋರ್ ಕಮಿಟಿಯಲ್ಲಿ ಇದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು.
ಶನಿವಾರ ನಡೆದ ಬಿಜೆಪಿಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಆಹ್ವಾನಿತರ ಪಟ್ಟಿಯಲ್ಲಿ ಪ್ರತ್ಯೇಕ ಕೋರ್ ಕಮಿಟಿ ಸದಸ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಕಾಣಿಸಿಕೊಂಡಿತ್ತು.