ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ರೂ. 222 ಕೋಟಿ ಅಂದಾಜು ವೆಚ್ಚದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಇದೇ ಡಿ.22ರಂದು ಬೆಳಗ್ಗೆ 11.30ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋಧನಾ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಕೊನೆಯ ಹಂತದ ಕಾಮಗಾರಿ ಹಾಗೂ ಆವರಣದಲ್ಲಿ ನಡೆದಿರುವ ಸಿದ್ಧತೆಗಳ ಕುರಿತು ಪರಿಶೀಲನೆ ಕೈಗೊಂಡ ಬಳಿಕ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಐಸಿಯು ವಿಭಾಗವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶಸ್ತ್ರಚಿಕಿತ್ಸಾ ವಿಭಾಗ,
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕ್ಯಾತ್ ಲ್ಯಾಬ್ ವಿಭಾಗ, ಕೆಕೆಆರ್.ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಸಭಾಂಗಣ ಉದ್ಘಾಟಿಸಲಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ರಾಜ್ಯ ಸರಕಾರ ಮತ್ತು ಕೆಕೆಆರ್.ಡಿಬಿ ಅನುದಾನ ಬಳಸಿಕೊಂಡು ಆಸ್ಪತ್ರೆ ನಿರ್ಮಿಸಲಾಗಿದೆ. ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಲಭಿಸಿದ ನೆನಪಿಗಾಗಿ ಒಟ್ಟು 371 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಇದಾಗಿದೆ. ಈ ಆಸ್ಪತ್ರೆಯಿಂದಾಗಿ ಕಲಬುರಗಿ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲ ಆಗಲಿದೆ ಎಂದು ನುಡಿದರು.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಉಭಯ ಸಚಿವರು ಜಯದೇವ ಆಸ್ಪತ್ರೆಯಲ್ಲಿ ನಡೆದಿರುವ ಕೊನೆಯ ಹಂತದ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.